ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ವತಿಯಿಂದ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಲಿದ್ದು, ಎರಡು ಪಕ್ಷಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ 15 ತಿಂಗಳ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಸರ್ಕಾರದಿಂದ ಅನುಕೂಲವಾಗಲಿದೆ ಎಂದು ನಂಬಿದ್ದ ಜನರ ನಿರೀಕ್ಷೆ ಹುಸಿಯಾಗಿದೆ ಎಂದರು.
ರಾಜ್ಯದ ಪೊಲೀಸರಿಂದ ಸೂಕ್ತ ನ್ಯಾಯ ಸಿಗುವುದಿಲ್ಲ. ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.